ಬೈಬಲ್ ಆಯ್ಕೆ
ಹಳೆಯ ಒಡಂಬಡಿಕೆಯಲ್ಲಿ
ಹೊಸ ಒಡಂಬಡಿಕೆ
ಕನ್ನಡ ಬೈಬಲ್ 1934

ಕೀರ್ತನೆಗಳು ೧೦೮

ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ಹೃದಯಪೂರ್ವಕವಾಗಿ ವಾದ್ಯ ನುಡಿಸುತ್ತಾ ಹಾಡುವೆನು.

ಹಾರ್ಪ್‌ವಾದ್ಯಗಳೇ, ಲೈರ್‌ವಾದ್ಯಗಳೇ, ನಾವು ಸೂರ್ಯನನ್ನು ಎಚ್ಚರಗೊಳಿಸೋಣ!

ಯೆಹೋವನೇ, ಜನಾಂಗಗಳಲ್ಲಿಯೂ ವಿದೇಶಿಯರಲ್ಲಿಯೂ ನಿನ್ನನ್ನು ಕೊಂಡಾಡುವೆವು.

ಯಾಕೆಂದರೆ ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೋಡಗಳಿಗಿಂತಲೂ ಎತ್ತರವಾಗಿದೆ.

ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.

ನಿನ್ನ ಸ್ನೇಹಿತರಾದ ನಮ್ಮ ಪ್ರಾರ್ಥನೆಗೆ ಕಿವಿಗೊಟ್ಟು ನಮ್ಮನ್ನು ರಕ್ಷಿಸು. ನಿನ್ನ ಬಲಗೈಯಿಂದ ನಮ್ಮನ್ನು ಕಾಪಾಡು.

ದೇವರು ತನ್ನ ಆಲಯದೊಳಗಿಂದ ಹೀಗೆಂದನು: “ನಾನು ಯುದ್ಧದಲ್ಲಿ ಗೆದ್ದು ಜಯಘೋಷ ಮಾಡುವೆನು; ಶೆಕೆಮ್ ಪ್ರದೇಶವನ್ನೂ ಸುಕ್ಕೋತ್ ಬಯಲನ್ನೂ ನನ್ನ ಜನರಿಗೆ ಕೊಡುವೆನು.

ಗಿಲ್ಯಾದ್ ಪ್ರಾಂತವೂ ಮನಸ್ಸೆ ಪ್ರಾಂತವೂ ನನ್ನದಾಗಿರುತ್ತವೆ. ಎಫ್ರಾಯೀಮ್ ನನ್ನ ಶಿರಸ್ತ್ರಾಣವಾಗಿರುತ್ತದೆ. ಯೆಹೂದವು ನನ್ನ ರಾಜದಂಡವಾಗಿರುತ್ತದೆ.

ಮೋವಾಬ್ ನನ್ನ ಪಾದತೊಳೆಯುವ ಬೋಗುಣಿಯಂತಿರುತ್ತದೆ. ಎದೋಮ್ ನನ್ನ ಪಾದರಕ್ಷೆಗಳನ್ನು ಹೊತ್ತುಕೊಂಡು ಹೋಗುವ ಗುಲಾಮನಾಗಿರುತ್ತದೆ. ಫಿಲಿಷ್ಟಿಯರನ್ನು ಸೋಲಿಸಿದ ಮೇಲೆ ನಾನು ಜಯಘೋಷ ಮಾಡುವೆನು.”

೧೦

ವೈರಿಗಳ ಆಶ್ರಯದುರ್ಗಕ್ಕೆ ನನ್ನನ್ನು ನಡೆಸುವವರು ಯಾರು? ಎದೋಮನ್ನು ಸೋಲಿಸಲು ನನಗೆ ಸಹಾಯ ಮಾಡುವವರು ಯಾರು?

೧೧

ದೇವರೇ, ನೀನು ನಮ್ಮನ್ನು ತ್ಯಜಿಸಿ, ನಮ್ಮ ಸೈನ್ಯದೊಡನೆ ಹೋಗದಿರುವುದು ನಿಜವೇ?

೧೨

ನಮ್ಮ ಶತ್ರುವನ್ನು ಸೋಲಿಸಲು ದಯವಿಟ್ಟು ನಮಗೆ ಸಹಾಯಮಾಡು. ಜನರು ನಮಗೆ ಸಹಾಯಮಾಡಲಾರರು!

೧೩

ದೇವರು ಮಾತ್ರ ನಮ್ಮನ್ನು ಬಲಪಡಿಸಬಲ್ಲನು. ಆತನು ಮಾತ್ರ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು.

Kannada Bible 1934
Public Domain: 1934