ಬೈಬಲ್ ಆಯ್ಕೆ
ಹಳೆಯ ಒಡಂಬಡಿಕೆಯಲ್ಲಿ
ಹೊಸ ಒಡಂಬಡಿಕೆ
ಕನ್ನಡ ಬೈಬಲ್ 1934

ಕೀರ್ತನೆಗಳು ೨೯

ದೇವಪುತ್ರರೇ, ಯೆಹೋವನನ್ನು ಸ್ತುತಿಸಿರಿ! ಆತನ ಮಹಿಮೆಯನ್ನೂ ಶಕ್ತಿಯನ್ನೂ ಸ್ತುತಿಸಿರಿ.

ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ. ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ.

ಯೆಹೋವನ ಸ್ವರವು ಸಮುದ್ರದ ಮೇಲೆ ಕೇಳಿ ಬರುವುದು. ಮಹಾಸಾಗರದ ಮೇಲಿನ ಗುಡುಗಿನಂತೆ ಮಹಿಮಾ ಸ್ವರೂಪನಾದ ದೇವರ ಸ್ವರವು ಕೇಳಿಬರುವುದು.

ಯೆಹೋವನ ಸ್ವರವು ಆತನ ಶಕ್ತಿಯನ್ನೂ ಮಹಿಮೆಯನ್ನೂ ತೋರ್ಪಡಿಸುವುದು.

ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ. ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದುಹಾಕುವನು.

ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ; ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಎಳೆ ಹೋರಿಯಂತೆ ಕಾಣುತ್ತದೆ.

ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.

ಯೆಹೋವನ ಗರ್ಜನದಿಂದ ಅರಣ್ಯವು ಕಂಪಿಸುವುದು. ಆತನ ಗರ್ಜನಕ್ಕೆ ಕಾದೇಶ್ ಅರಣ್ಯವು ನಡುಗುವುದು.

ಯೆಹೋವನ ಗರ್ಜನಕ್ಕೆ ಜಿಂಕೆಗಳು ಹೆದರಿಕೊಳ್ಳುತ್ತವೆ; ಕಾಡಿನ ಮರಗಳು ಬರಿದಾಗುತ್ತವೆ. ಆದರೆ ಆತನ ಆಲಯದಲ್ಲಿ ಜನರು ಆತನ ಮಹಿಮೆಯನ್ನು ಹಾಡಿಕೊಂಡಾಡುವರು.

೧೦

ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು.

೧೧

ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ. ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.

Kannada Bible 1934
Public Domain: 1934