ಬೈಬಲ್ ಆಯ್ಕೆ
ಹಳೆಯ ಒಡಂಬಡಿಕೆಯಲ್ಲಿ
ಹೊಸ ಒಡಂಬಡಿಕೆ
ಕನ್ನಡ ಬೈಬಲ್ 1934

ಕೀರ್ತನೆಗಳು ೩೦

ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ; ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ; ಆದ್ದರಿಂದ ನಿನ್ನನ್ನು ಕೊಂಡಾಡುವೆನು.

ನನ್ನ ದೇವರಾದ ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದಾಗ ನೀನು ನನ್ನನ್ನು ಗುಣಪಡಿಸಿದೆ.

ಯೆಹೋವನೇ, ನೀನು ನನ್ನನ್ನು ಸಾವಿನಿಂದ ಬದುಕಿಸಿದೆ; ಪಾತಾಳಕ್ಕೆ ಇಳಿದುಹೋಗದಂತೆ ನನ್ನನ್ನು ಕಾಪಾಡಿದೆ.

ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ! ಆತನ ಪರಿಶುದ್ಧ ಹೆಸರನ್ನು ಕೊಂಡಾಡಿರಿ.

ಆತನ ಕೋಪವು ಕ್ಷಣಮಾತ್ರವಿರುವುದು. ಆತನ ಪ್ರೀತಿಯಾದರೋ ಶಾಶ್ವತವಾದದ್ದು. ನಾನು ಸಂಜೆಯಲ್ಲಿ ದುಃಖದಿಂದ ಮಲಗಿಕೊಂಡರೂ ಮುಂಜಾನೆ ಹರ್ಷದಿಂದ ಎಚ್ಚರಗೊಳ್ಳುವೆನು.

ನಾನು ಸುರಕ್ಷಿತವಾಗಿದ್ದಾಗ ನನಗೆ ಕೇಡೇ ಇಲ್ಲವೆಂದುಕೊಂಡೆನು.

ಯೆಹೋವನೇ, ನಾನು ನಿನ್ನ ಕೃಪೆಗೆ ಪಾತ್ರನಾಗಿದ್ದಾಗ ನನ್ನನ್ನು ಯಾವುದೂ ಸೋಲಿಸಲಾರದು ಎಂದುಕೊಂಡೆನು. ಆದರೆ ನೀನು ನನಗೆ ವಿಮುಖನಾದಾಗ ಭಯದಿಂದ ನಡುಗತೊಡಗಿದೆ.

ಯೆಹೋವನೇ, ನಾನು ನಿನಗೆ ಅಭಿಮುಖನಾಗಿ ಪ್ರಾರ್ಥಿಸಿದೆ; ಕರುಣೆತೋರು ಎಂದು ನಿನ್ನನ್ನು ಕೇಳಿಕೊಂಡೆ.

“ದೇವರೇ, ನಾನು ಸತ್ತು ಸಮಾಧಿಯೊಳಗೆ ಹೋದರೆ, ಅದರಿಂದ ಒಳ್ಳೆಯದೇನಾದೀತು? ಸತ್ತವರು ಕೇವಲ ಮಣ್ಣಿನಲ್ಲಿ ಬಿದ್ದಿರುವರು! ಅವರು ನಿನ್ನನ್ನು ಸ್ತುತಿಸುವುದಿಲ್ಲ! ಶಾಶ್ವತವಾದ ನಿನ್ನ ನಂಬಿಗಸ್ತಿಕೆಯ ಕುರಿತು ಅವರು ಹೇಳುವುದಿಲ್ಲ.

೧೦

ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಕರುಣೆತೋರು! ಯೆಹೋವನೇ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡೆನು.

೧೧

ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ.

೧೨

ನಾನು ಮೌನವಾಗಿರದೆ ಸದಾಕಾಲ ನಿನ್ನನ್ನು ಸ್ತುತಿಸುವೆನು. ನನ್ನ ದೇವರಾದ ಯೆಹೋವನೇ, ನಿನ್ನನ್ನು ಸದಾಕಾಲ ಸ್ತುತಿಸುವೆನು.

Kannada Bible 1934
Public Domain: 1934