೧ |
ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು. |
೨ |
ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು. |
೩ |
ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು. |
೪ |
ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ. |
೫ |
ದೇವರಾದ ಸರ್ವೇಶ್ವರ ಸ್ವಾಮಿ ಪರಲೋಕ - ಭೂಲೋಕಗಳನ್ನು ಸೃಷ್ಟಿಮಾಡಿದಾಗ ಯಾವ ಗಿಡಗಳೂ ಭೂಮಿಯಲ್ಲಿ ಇರಲಿಲ್ಲ. ಯಾವ ಬೀಜವೂ ಮೊಳೆತಿರಲಿಲ್ಲ. ಏಕೆಂದರೆ ದೇವರಾದ ಸರ್ವೇಶ್ವರ ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡಲು ಮನುಷ್ಯನೂ ಇರಲಿಲ್ಲ. |
೬ |
ಆದರೂ ಭೂಮಿಯಿಂದ ನೀರು ಉಕ್ಕಿಬಂದು ನೆಲಕ್ಕೆ ನೀರೆರೆಯುತ್ತಿತ್ತು. |
೭ |
ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು. |
೮ |
ಇದಲ್ಲದೆ, ದೇವರಾದ ಸರ್ವೇಶ್ವರ ಪೂರ್ವದಿಕ್ಕಿನಲ್ಲಿರುವ ಏದೆನ್ ಪ್ರದೇಶದಲ್ಲಿ ಒಂದು ಉದ್ಯಾನವನವನ್ನು ಮಾಡಿ ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು. |
೯ |
“ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು. |
೧೦ |
ಏದೆನ್ ಪ್ರದೇಶದಲ್ಲಿ ಒಂದು ನದಿ ಹುಟ್ಟಿ ಆ ವನಕ್ಕೆ ನೀರೆರೆಯುತ್ತಿತ್ತು. ಅದು ಅಲ್ಲಿಂದ ಹರಿದು ಆಚೆಕಡೆ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು. |
೧೧ |
ಮೊದಲನೆಯದರ ಹೆಸರು ಪೀಶೋನ್. ಇದು ಬಂಗಾರ ದೊರಕುವ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. ಆ ದೇಶದ ಬಂಗಾರ ಅಪ್ಪಟವಾದುದು. |
೧೨ |
‘ಬದೋಲಖ’ ಎಂಬ ವಿಶೇಷ ಸಾಂಬ್ರಾಣಿ, ‘ಗೋಮೇಧಿಕ’ ಎಂಬ ರತ್ನವೂ ಅಲ್ಲಿ ದೊರಕುತ್ತವೆ. |
೧೩ |
ಎರಡನೆ ನದಿಯ ಹೆಸರು ಗೀಹೋನ್, ಇದು ಕೂಷ್ ದೇಶವನ್ನೆಲ್ಲಾ ಸುತ್ತುತ್ತದೆ. |
೧೪ |
ಮೂರನೇ ನದಿಯ ಹೆಸರು ಟೈಗ್ರಿಸ್. ಇದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತದೆ. ನಾಲ್ಕನೆಯದು ಯೂಫ್ರೆಟಿಸ್ ನದಿ. |
೧೫ |
ದೇವರಾದ ಸರ್ವೇಶ್ವರ ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ವನವನ್ನು ಕೃಷಿಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಬಿಟ್ಟರು. |
೧೬ |
ಇದಲ್ಲದೆ, ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ, “ನೀನು ಈ ತೋಟದಲ್ಲಿರುವ ಎಲ್ಲ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು. |
೧೭ |
ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು. |
೧೮ |
ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು. |
೧೯ |
ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು. |
೨೦ |
ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ. |
೨೧ |
ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು. |
೨೨ |
ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು. |
೨೩ |
ಅವನು ಆಕೆಯನ್ನು ನೋಡಿ ಹೀಗೆಂದನು: ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು. |
೨೪ |
ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು. |
೨೫ |
ಆ ಸ್ತ್ರೀಪುರುಷರಿಬ್ಬರೂ ಬೆತ್ತಲೆ ಆಗಿದ್ದರೂ ನಾಚಿಕೊಳ್ಳಲಿಲ್ಲ.
|
Kannada Bible (KNCL) 2016 |
No Data |