A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ಕೊಲೊಸ್ಸೆಯರಿಗೆ ೧ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗೂ ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಸಹೋದರರಿಗೆ -
ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಮತ್ತು ಸಹೋದರ ತಿಮೊಥೇಯನು ಬರೆಯುವ ಪತ್ರ. ನಮ್ಮ ತಂದೆಯಾದ ದೇವರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮ್ಮಲ್ಲಿರಲಿ!
ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.
***
ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.
ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.
ಈ ಶುಭಸಂದೇಶವನ್ನು ಕ್ರಿಸ್ತಯೇಸುವಿನ ನಂಬಿಕಸ್ಥ ದಾಸನೂ ನಮ್ಮ ಜೊತೆಯ ಸೇವಕನೂ ಆದ ಎಪಫ್ರನಿಂದ ಕಲಿತುಕೊಂಡಿದ್ದೀರಿ.
ಪವಿತ್ರಾತ್ಮ ಅವರು ನಿಮಗೆ ಅನುಗ್ರಹಿಸಿದ ಪ್ರೀತಿಯ ಬಗ್ಗೆ ನಮಗೆ ತಿಳಿಸಿದವನು ಸಹ ಆತನೇ.
ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.
೧೦
ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.
೧೧
ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.
೧೨
ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.
೧೩
ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.
೧೪
ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.
೧೫
ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,
೧೬
ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.
೧೭
ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ.
೧೮
ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.
೧೯
ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.
೨೦
ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.
೨೧
ಹಿಂದೆ, ನೀವು ಆಚಾರ-ವಿಚಾರಗಳಲ್ಲಿ ಕೆಟ್ಟವರಾಗಿದ್ದರಿಂದ ದೇವರ ವಿರೋಧಿಗಳಾಗಿದ್ದು ಅವರಿಂದ ದೂರವಿದ್ದಿರಿ.
೨೨
ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.
೨೩
ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.
೨೪
ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.
೨೫
ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ.
೨೬
ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯಗಳನ್ನು, ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ.
೨೭
ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.
೨೮
ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.
೨೯
ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.ಕೊಲೊಸ್ಸೆಯರಿಗೆ ೧:1
ಕೊಲೊಸ್ಸೆಯರಿಗೆ ೧:2
ಕೊಲೊಸ್ಸೆಯರಿಗೆ ೧:3
ಕೊಲೊಸ್ಸೆಯರಿಗೆ ೧:4
ಕೊಲೊಸ್ಸೆಯರಿಗೆ ೧:5
ಕೊಲೊಸ್ಸೆಯರಿಗೆ ೧:6
ಕೊಲೊಸ್ಸೆಯರಿಗೆ ೧:7
ಕೊಲೊಸ್ಸೆಯರಿಗೆ ೧:8
ಕೊಲೊಸ್ಸೆಯರಿಗೆ ೧:9
ಕೊಲೊಸ್ಸೆಯರಿಗೆ ೧:10
ಕೊಲೊಸ್ಸೆಯರಿಗೆ ೧:11
ಕೊಲೊಸ್ಸೆಯರಿಗೆ ೧:12
ಕೊಲೊಸ್ಸೆಯರಿಗೆ ೧:13
ಕೊಲೊಸ್ಸೆಯರಿಗೆ ೧:14
ಕೊಲೊಸ್ಸೆಯರಿಗೆ ೧:15
ಕೊಲೊಸ್ಸೆಯರಿಗೆ ೧:16
ಕೊಲೊಸ್ಸೆಯರಿಗೆ ೧:17
ಕೊಲೊಸ್ಸೆಯರಿಗೆ ೧:18
ಕೊಲೊಸ್ಸೆಯರಿಗೆ ೧:19
ಕೊಲೊಸ್ಸೆಯರಿಗೆ ೧:20
ಕೊಲೊಸ್ಸೆಯರಿಗೆ ೧:21
ಕೊಲೊಸ್ಸೆಯರಿಗೆ ೧:22
ಕೊಲೊಸ್ಸೆಯರಿಗೆ ೧:23
ಕೊಲೊಸ್ಸೆಯರಿಗೆ ೧:24
ಕೊಲೊಸ್ಸೆಯರಿಗೆ ೧:25
ಕೊಲೊಸ್ಸೆಯರಿಗೆ ೧:26
ಕೊಲೊಸ್ಸೆಯರಿಗೆ ೧:27
ಕೊಲೊಸ್ಸೆಯರಿಗೆ ೧:28
ಕೊಲೊಸ್ಸೆಯರಿಗೆ ೧:29


ಕೊಲೊಸ್ಸೆಯರಿಗೆ 1 / ಕೊ 1
ಕೊಲೊಸ್ಸೆಯರಿಗೆ 2 / ಕೊ 2
ಕೊಲೊಸ್ಸೆಯರಿಗೆ 3 / ಕೊ 3
ಕೊಲೊಸ್ಸೆಯರಿಗೆ 4 / ಕೊ 4